
ವರದಿಗಾರ (ಜುಲೈ,11): ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವಂತಹ ರಾಜೀನಾಮೆ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ‘ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ‘ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಅವರು ಕುಮಾರ ಕೃಪ ಅತಿಥಿ ಗೃಹದಲ್ಲಿ ಮೈತ್ರಿ ನಾಯಕರ ಸಭೆಯ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ವೇಳೆ ಏನೇನು ನಡೆದಿದೆ ಎಂಬುದನ್ನು ನೆನಪು ಮಾಡಿಕೊಳ್ಳಬೇಕು, 2009ರಲ್ಲಿ ಇದೇ ಪರಿಸ್ಥಿತಿ ಇದ್ದಾಗ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರಾ ?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದು, ರಾಜೀನಾಮೆ ನೀಡುವ ಯಾವುದೇ ಚಿಂತನೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿಯ ಒತ್ತಡ ಹೆಚ್ಚಾಗುತ್ತಿರುವುದರ ಮಧ್ಯೆಯೇ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.
ಇದೇ ಬೇಡಿಕೆಯನ್ನು ಮುಂದಿಟ್ಟು ನಿನ್ನೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಭೇಟಿ ಮಾಡಿ ಒತ್ತಾಯ ಮಾಡಿತ್ತು.
ಈ ಎಲ್ಲಾ ರಾಜಕೀಯ ಬಿಕ್ಕಟ್ಟು ನಡುವೆ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಇಂದು ಕರೆಯಲಾಗಿದ್ದು, ಸಭೆಯಲ್ಲಿ ಸರ್ಕಾರವನ್ನು ಉಳಿಸಿಕೊಳ್ಳುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
