
ಆಸ್ತಿ ಮುಟ್ಟುಗೋಲುಗೈದಿದಕ್ಕೆ ಉತ್ತರಿಸುವಂತೆ ನೋಟಿಸ್ ಜಾರಿ
ವರದಿಗಾರ, ಜ.31: ಕೇಂದ್ರ ಬಿಜೆಪಿ ಸರಕಾರವು ಧರ್ಮದ ಆಧಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಆಸ್ತಿ ವಶಪಡಿಸಿಕೊಂಡಿರುವುದಕ್ಕೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
2019ರ ಡಿಸೆಂಬರ್ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಗಲಭೆ ಸಂಭವಿಸಿತ್ತು. ಇದಕ್ಕೆ ಪ್ರತೀಕಾರವಾಗಿ ಉತ್ತರ ಪ್ರದೇಶ ಸರ್ಕಾರ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ದ್ವೇಷದ ರಾಜಕೀಯ ಮಾಡಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಲ್ಲದೆ ಇದನ್ನು ಪ್ರಶ್ನಿಸಿ ವಕೀಲ ಪರ್ವೇಜ್ ಆರಿಫ್ ಟಿಟು ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ.
ರಾಜಕೀಯ ಕಾರಣಗಳಿಂದ ಪ್ರತಿಭಟನಾಕಾರರ ಮೇಲೆ ಪ್ರತೀಕಾರಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಮುಂದಾಗಿದ್ದಾರೆ. ಒಂದು ನಿರ್ಧಿಷ್ಟ ಸಮುದಾಯದ ಜನರ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರ್ಜಿನಲ್ಲಿ ಆರೋಪಿಸಿದ್ದಾರೆ.
ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅವರು ಕೋರ್ಟ್ಗೆ ಮನವಿ ಮಾಡಿದ್ದಾರೆ.
