ರಾಜ್ಯ ಸುದ್ದಿ

ಬೆಂಗಳೂರು ಗಲಭೆ: ತನಿಖೆಯ ಮೇಲೆ ಪ್ರಭಾವ ಬೀರಲು ಬಿಜೆಪಿಯಿಂದ ಪ್ರಯತ್ನ; ಡಿಕೆಶಿ ಗಂಭೀರ ಆರೋಪ

ವರದಿಗಾರ (ಆ.21):  ಪ್ರವಾದಿ ನಿಂದನೆ ಪೋಸ್ಟ್ ನಿಂದಾಗಿ ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ಉಂಟಾದ ಗಲಭೆಗೆ ಸಂಬಂಧಿಸಿ ರಾಜ್ಯ ಬಿಜೆಪಿ ಸರ್ಕಾರ, ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಗಲಭೆಯ ಹಿಂದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿರುವ ಡಿಕೆಶಿ, ಹಿರಿಯ ಪೊಲೀಸ್ ಅಧಿಕಾರಿಗಳು ಬಿಜೆಪಿಯ ಏಜೆಂಟರಂತೆ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಮ್ಯಾಜಿಸ್ಟ್ರೇಟ್‌ ತನಿಖೆಯಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನವನ್ನು ಸಹಿಸುವುದಿಲ್ಲ. ಇಂತಹ ಬೆದರಿಕೆಗಳಿಗೆ ಪಕ್ಷ ಹೆದರುವುದಿಲ್ಲ ಎಂದು ಗುಡುಗಿದ್ದಾರೆ.

ಇತ್ತೀಚೆಗೆ ಇಲ್ಲಿ ಹಿಂಸಾಚಾರ ಏಕೆ ಸಂಭವಿಸಿದೆ ಎಂಬುದರ ಬಗ್ಗೆ ಚರ್ಚಿಸಲು ನಾನು ಸಿದ್ಧನಿಲ್ಲ, ಆದರೆ ನೀವು ಬಿಜೆಪಿ ಸರ್ಕಾರದ ಸಚಿವರ ಪ್ರಭಾವಕ್ಕೆ ಒಳಗಾಗುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಡಿ.ಕೆ.ಶಿವಕುಮಾರ್ ನೇರ ಆರೋಪ ಮಾಡಿದರು.

ಬಿಜೆಪಿ ನಾಯಕರು ಮತ್ತು ಸಚಿವರು ತನಿಖೆಯ ಮೇಲೆ ಪ್ರಭಾವ ಬೀರುವ ಹೇಳಿಕೆ ನೀಡುತ್ತಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷವನ್ನು ಪ್ರಕರಣದಲ್ಲಿ ಸಿಲುಕಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಆರೋಪಿಸಿದರು.

ನಿಮ್ಮ ವೈಫಲ್ಯದಿಂದ ಈ ಗಲಭೆ ನಡೆದಿದೆ. ಈ ಗಲಭೆಯನ್ನು ನಾವು ಖಂಡಿಸುತ್ತೇವೆ. ಈ ಘಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾರಣರಲ್ಲ. ಪೊಲೀಸ್ ಆಯುಕ್ತರೇ, ನೀವು ಹೀಗೆ ಮುಂದುವರಿದರೆ ನಿಮ್ಮ ವಿರುದ್ಧವೇ ಪ್ರತಿಭಟನೆ ನಡೆಸಬೇಕಾದೀತು ಎಂದು ಪೊಲೀಸ್ ಆಯುಕ್ತರ ವಿರುದ್ಧವೇ ಹರಿಹಾಯ್ದರು.

ಆಗಸ್ಟ್ 11ರಂದು ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ  ನವೀನ್ ಎಂಬಾತ ಫೇಸ್‌ಬುಕ್‌ನಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರಿಂದ ಗಲಭೆ ಉಂಟಾಗಿತ್ತು. ಪೊಲೀಸ್ ಗೋಲಿಬಾರ್‌ನಲ್ಲಿ ಒಟ್ಟು ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group