ರಾಜ್ಯ ಸುದ್ದಿ

ಡ್ರಗ್ಸ್ ಹಗರಣದ ತನಿಖೆಯ ನೆಪದಲ್ಲಿ ಸರ್ಕಾರದ ವೈಫಲ್ಯಗಳಿಂದ ಗಮನ ತಪ್ಪಿಸುವ ಪ್ರಯತ್ನ : ಸಿದ್ದರಾಮಯ್ಯ

siddaramaiah

ವರದಿಗಾರ (ಸೆ.11): ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ಬಿಜೆಪಿ  ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ ಮುಖ್ಯಮಂತ್ರಿಯವರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ, ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿ ಬಿಟ್ಟು ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ? ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ವಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group