ವರದಿಗಾರ (ಸೆ.28): ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಸಾವಿರಾರು ಮಂದಿ ವಿವಿಧ ಕಡೆಗಳಿಂದ ಮೆರವಣಿಗೆ ಮೂಲಕ ಟೌನ್ ಹಾಲ್ ಗೆ ಬಂದು ಅಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಕಲಾವಿದರು ಪ್ರತಿಭಟನೆಯ ಕಿಚ್ಚನ್ನು ಹೆಚ್ಚಿಸುತ್ತಿದ್ದಾರೆ. ರೈತರಿಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ.
ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ಬಂದ್ ಗೆ ನೈತಿಕ ಬೆಂಬಲ ನೀಡಿದ್ದಾರೆ. ಆದರೂ ಜನಜೀವನಕ್ಕೆ ಅಡಚಣೆಯಾಗಿಲ್ಲ.
30ಕ್ಕೂ ಹೆಚ್ಚು ಪ್ರತಿಭಟನಕಾರರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಡಿಕೇರಿ , ಕುಶಾಲನಗರ ಸೇರಿದಂತೆ ಹಲವೆಡೆ ಪ್ರತಿಭಟನೆಗೆ ಮುಂದಾದ ವಿವಿಧ ರಾಜಕೀಯ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿಯಲ್ಲಿ ಕಾಂಗ್ರೆಸ್, ಜೆಡಿಎಸ್ , ಎಸ್ ಡಿಪಿಐ ಸೇರಿದಂತೆ ಪ್ರಗತಿಪರ ಸಂಘಟನೆ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರದ ಕೊಪ್ಪ ಗೇಟ್ ಬಳಿಯೂ ಪ್ರತಿಭಟನಾ ನಿರತರನ್ನು ಬಂಧಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲೂ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂದ್ ಕರೆ ಕೊಟ್ಟರೂ ಸರ್ವಿಸ್ ಮತ್ತು ಸಿಟಿ ಬಸ್ಸುಗಳು ಬಸ್ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ್ದನ್ನು ಕಂಡ ಪ್ರತಿಭಟನಕಾರರು ಬಸ್ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡರು.
