ವರದಿಗಾರ (ಅ.8): ದೆಹಲಿಯ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವಿರುದ್ಧ ದ್ವೇಷ ಭಾಷಣ ಮಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಸಂಸದ ಪ್ರವೀಶ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಪಿಐ (ಎಂ) ಮುಖಂಡೆ ಬೃಂದಾ ಕಾರಟ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ವಿಚಾರಣಾ ನ್ಯಾಯಾಲಯದ ಆಗಸ್ಟ್ 26 ರಂದು ಕಾರಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಸಂಬಂಧಪಟ್ಟ ಪ್ರಾಧಿಕಾರ ಮತ್ತು ಕೇಂದ್ರ ಸರ್ಕಾರದಿಂದ ಅಗತ್ಯ ಪೂರ್ವ ಅನುಮತಿ ಪಡೆದಿಲ್ಲ ಎಂಬ ಕಾರಣ ಮುಂದಿಟ್ಟು ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು.
ಠಾಕೂರ್ ಮತ್ತು ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ನಿರ್ದೇಶನ ನೀಡುವಂತೆ ಕೋರಿ ಸಿಪಿಐ (ಎಂ) ಮುಖಂಡರಾದ ಬೃಂದಾ ಕಾರಟ್ ಮತ್ತು ಕೆ.ಎಂ. ತಿವಾರಿ ಅವರು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದಾಗ್ಯೂ, ಪೂರ್ವಾನುಮತಿ ಪಡೆದಿಲ್ಲ ಎಂದು ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಕಾರಟ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
