ವರದಿಗಾರ (ಅ.14) : ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಎದುರಾಗಿದ್ದರೂ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ 2020ರ ಜುಲೈ 26ರಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳ ಪ್ರಚಾರಕ್ಕೆ 5.70 ಕೋಟಿ ರೂ. ವೆಚ್ಚ ಮಾಡಿರುವುದು ಖಂಡನೀಯ ಎಂದು ವೇಲ್ಫೇರ್ ಪಾರ್ಟಿ ಇಂಡಿಯಾದ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ್ದ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಮಾಹಿತಿ ನೀಡಿದ್ದು, ಸಾಧನೆಗಳು ಮಾತಾಗಬೇ ಕೇ ಹೊರತು ಮಾತು ಸಾಧನೆ ಆಗಬಾರದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಯಾವಾಗಲೂ ಹೇಳುತ್ತಿರುತ್ತಾರೆ. ಅವರ ಮಾತಿನಂತೆ ಸಾಧನೆ ಮಾತಾಗಿದ್ದರೆ ಕೋಟಿ ಕೋಟಿ ಹಣ ಖರ್ಚು ಮಾಡಿ ಪ್ರಚಾರ ಮಾಡುವ ಅವಶ್ಯಕತೆ ಇರಲಿಲ್ಲ. ಸರ್ಕಾರದ ಸಾಧನೆಗಳ ಬಗ್ಗೆ ಜನ ಮಾತಾಡಬೇಕು. ಅದುವೇ ಸರ್ಕಾರದ ನಿಜವಾದ ಯಶಸ್ಸು. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ತಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಲಿ ಎಂದು ಟೀಕಿಸಿದ್ದಾರೆ.
ಸರ್ಕಾರದ ಸಾಧನೆಗಳ ಪ್ರಚಾರಕ್ಕೆ ಕೋಟ್ಯಾಂತರ ರೂಪಾಯಿ ಜನರ ತೆರಿಗೆ ಹಣ ಬಳಸಿದ್ದಾಯಿತು. ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ತುತ್ತಾಗಿದ್ದ ಶ್ರಮಿಕ ವರ್ಗಕ್ಕೆ ಘೋಷಿಸಲಾಗಿದ್ದ ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಯೋಜನ ಇನ್ನೂ ಅನೇಕರಿಗೆ ಸಿಕ್ಕಿಲ್ಲ. ಶಾಲೆಗಳು ಬಂದ್ ಆಗಿರುವುದರಿಂದ ರಾಜ್ಯದಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಖಾಸಗಿ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ತಕ್ಷಣ ಗಮನಹರಿಸಬೇಕು. ಜನರ ದುಡ್ಡನ್ನು ಮನಸೋಇಚ್ಛೆ ಖರ್ಚು ಮಾಡುವುದನ್ನು ಬಿಟ್ಟು ಜನಹಿತಕ್ಕಾಗಿ ಬಳಕೆ ಮಾಡಬೇಕು ಎಂದು ತಾಹೇರ್ ಹುಸೇನ್ ಆಗ್ರಹಿಸಿದ್ದಾರೆ.
