ವರದಿಗಾರ (ಅ.23) ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಮನೆ ಹಿಂದಿರುತ್ತಿದ್ದ 19 ವರ್ಷದ ಯುವತಿಯೊಬ್ಬಳ ಮೇಲೆ ಮೂವರು ದುರುಳರು, ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನವರಾತ್ರಿ ಉತ್ಸವದ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದಾಗ ಬುಧವಾರ ರಾತ್ರಿ ಮೂವರು ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಂದ್ವಾಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ್ ತಿಳಿಸಿದ್ದಾರೆ
ಆರೋಪಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಅವರು ತಿಳಿಸಿದರು.
ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
