ವರದಿಗಾರ-ಬೆಂಗಳೂರು: ಡಿವೈಎಸ್ಪಿ ಎಂ.ಕೆ. ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯು ಇಂದು ರಾಜ್ಯದ ಬೆಂಗಳೂರು, ಮಂಗಳೂರು, ಕಾರವಾರ, ಮಡಿಕೇರಿ, ಬೀದರ್ಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಬೆಂಗಳೂರು ಆನಂದ್ ರಾವ್ ಸರ್ಕಲ್ನ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತನಾಡುತ್ತಾ, ಕೆ.ಜೆ. ಜಾರ್ಜ್ ರಾಜೀನಾಮೆ ನೀಡುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ. ಹಾಗೂ ಸೆಪ್ಟೆಂಬರ್ 26ರಿಂದ ಆನಂದರಾವ್ ಸರ್ಕಲ್ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮುಂದಿನ ಕೆಲವೇ ದಿನಗಳಲ್ಲಿ ಸಚಿವರ ಹಾಗೂ ವಿಶೇಷವಾಗಿ ಕೆಂಪಯ್ಯ ಅವರ ಹಗರಣವನ್ನು ಬಯಲು ಮಾಡುತ್ತೇವೆ ಎಂದು ಇದೇ ಸಂದರ್ಭ ಅವರು ಹೇಳಿದ್ದಾರೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಗಣಪತಿಯದ್ದು ಆತ್ಮಹತ್ಯೆಯಲ್ಲ, ಕೊಲೆ. ಇದರ ಹಿಂದಿರುವ ದುಷ್ಟ ಶಕ್ತಿಗಳ ಕೈವಾಡ ಬಹಿರಂಗವಾಗಬೇಕು. ಸತ್ಯ ಬಹಿರಂಗವಾಗಬೇಕಾದರೆ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಲೇಬೇಕು. ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ.
