ವರದಿಗಾರ (02.12.2017): ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ವಿಧಾನಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ದೇವರು- ಧರ್ಮದ ವಿಚಾರವನ್ನು ಎಳೆದು ತಂದು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದರಿಂದ ಪ್ರಧಾನಿ ಮೋದಿ ವಿರುದ್ಧ ಕೇಂದ್ರ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.
ಅವರು ನಿನ್ನೆ ಬೆಂಗಳೂರಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಿದ್ದರು.
ಸೋಮನಾಥ ದೇವಾಲಯದ ವಿಷಯವನ್ನು ಪ್ರಸ್ತಾಪಿಸಿ ಪ್ರಧಾನಿ ಧಾರ್ಮಿಕ ಮತ್ತು ಅಧ್ಯಾತ್ಮಿಕ ಭಾವನೆಗಳ ಮೇಲೆ ಪ್ರಭಾವ ಬೀರುವ ಕೆಲಸ ಮಾಡಿದ್ದು, ಇದು ಪ್ರಜಾಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಗ್ರಪ್ಪ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ದಲಿತರನ್ನು ಓಲೈಸುವ ಹೇಳಿಕೆಗಳನ್ನು ನೀಡಿರುವ ಗುಜರಾತ್ ಮುಖ್ಯಮಂತ್ರಿ ವಿಜಯಭಾಯಿ ರೂಪಾಣಿಯದ್ದು ಕಾನೂನು ಬಾಹಿರ ಹೇಳಿಕೆ. ಆದ್ದರಿಂದ ಅವರ ವಿರುದ್ಧವೂ ಆಯೋಗ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇದೇ ಸಂದರ್ಭ ಅವರು ಆಗ್ರಹಿಸಿದ್ದಾರೆ.
