ವರದಿಗಾರ (ಡಿ.19): ಸುಮಾರು 20 ವರ್ಷಗಳಿಗಿಂತಲೂ ಹೆಚ್ಚು ಕಾಲ ಗುಜರಾತ್ನಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಹೀಗಾಗಿ ಅಲ್ಲಿ ಅಧಿಕಾರಕ್ಕೆ ಬರುವುದು ಬಿಜೆಪಿಗೆ ದೊಡ್ಡ ವಿಷಯವಲ್ಲ . ಆದರೆ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಬಳಸಿಕೊಂಡಿರುವ ಗುಜರಾತ್ ಮಾದರಿ ವಿಫಲವಾಗಿದೆ. ಇದಕ್ಕೆ ಕಾರಣವೇನೆಂದರೆ, ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಬಿತ್ತಿದ ಕನಸುಗಳು ಯಾವುದೂ ನನಸಾಗಿಲ್ಲ ಎಂದು ಬಿಜೆಪಿಯ ಮಿತ್ರ ಪಕ್ಷ ಶಿವಸೇನೆಯ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.
ಅಧಿಕಾರಕ್ಕೆ ಬರುವುದು ದೊಡ್ಡ ವಿಷಯವಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಸೋತಿರಬಹುದು. ಆದರೆ, ಅದು ಬಿಜೆಪಿಯನ್ನೂ ಸೋಲಿಸಿದೆ ಎಂದು ಅವರು ಹೇಳಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ನಿಜವಾಗಿ ಗೆದ್ದಿರುವುದು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.
ನೋಟು ರದ್ದತಿಯ ಮೂಲಕ ಬಡವರ ಜೇಬನ್ನು ಖಾಲಿ ಮಾಡಿರುವ ಬಿಜೆಪಿಯು ಅವರನ್ನು ಮತ್ತಷ್ಟು ಸಂಕಷ್ಟಕ್ಕೀಡುಮಾಡಿದೆ ಎಂದು ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
