ವರದಿಗಾರ (ಡಿ.28): ಸಂವಿಧಾನ ಮತ್ತು ಜಾತ್ಯತೀತರ ಬಗ್ಗೆ ಅವಿವೇಕಿತನದ ಹೇಳಿಕೆಯನ್ನು ನೀಡಿ, ಜನರ ಆಕ್ರೋಶಕ್ಕೆ ಕಾರಣರಾಗಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಇಂದು ಲೋಕಸಭೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.
ಅವರು ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಅಪ್ಪ ಅಮ್ಮನ ಗುರುತು ಇಲ್ಲದವರು ಜಾತ್ಯತೀತರು. ನಾವು ಸಂವಿಧಾನವನ್ನು ಬದಲಿಸುತ್ತೇವೆ. ಸಂವಿಧಾನ ಬದಲಿಸುವುದಕ್ಕಾಗಿಯೇ ನಾವು ಬಂದಿರುವುದು’ ಎಂದು ಹೇಳಿಕೆ ನೀಡಿದ್ದರು.
ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವಂತೆ ಮತ್ತು ಸಾರ್ವಜನಿಕ ಕ್ಷಮೆ ಕೋರುವಂತೆ ಒತ್ತಾಯಿಸಿ ರಾಜ್ಯಾದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಅದಲ್ಲದೆ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿದ್ದ ಕಾಂಗ್ರೆಸ್ ಸದಸ್ಯರು ಅನಂತ್ ಕುಮಾರ್ ಹೆಗಡೆ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಆಗ್ರಹಿಸಿ ಬುಧವಾರ ಸಂಸತ್ನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದ್ದರು.
‘ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೋರುತ್ತೇನೆ’ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
‘ನನಗೆ ಸಂವಿಧಾನ, ಸಂಸತ್ತು ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅಪಾರ ಗೌರವವಿದ್ದು, ನನಗೆ ಸಂವಿಧಾನವೇ ಸರ್ವೋಚ್ಛ. ದೇಶದ ಪ್ರಜೆಯಾಗಿ ನಾನು ಸಂವಿಧಾನಕ್ಕೆ ವಿರುದ್ಧವಾಗಿ ನಡೆಯಲಾರೆ’ ಎಂದು ಸ್ಪಷ್ಟಪಡಿಸಿದ್ದಾರೆ.
