ವರದಿಗಾರ (ಜ.4): ಬುಧವಾರ ಹಾಡಹಗಲೇ ಮಂಗಳೂರು ಸಮೀಪದ ಕಾಟಿಪಳ್ಳದಲ್ಲಿ ದೀಪಕ್ ರಾವ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಸುವ್ಯವಸ್ಥೆ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿರಾಜು ಅವರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಶಾಂತಿ ಕಾಪಾಡುವುದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಇಂತಹ ಸಮಾಜ ಘಾತಕ ಘಟನೆಗಳು ಮುರುಕಳಿಸುತ್ತಿರುವುದರ ಬಗ್ಗೆ ಅವರು ಖೇಧ ವ್ಯಕ್ತಪಡಿಸಿದ್ದಾರೆ .
ಎಡಿಜಿಪಿ ಕಮಲ್ಪಂಥ್ ಅವರಿಗೂ ದೂರವಾಣಿ ಕರೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಮಂಗಳೂರಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪರಿಸ್ಥಿತಿ ಕೈ ಮೀರದಂತೆ ನೋಡಿಕೊಳ್ಳಬೇಕು. ಸೂಕ್ಷ್ಮವಾಗಿ ಪರಿಸ್ಥಿತಿಯನ್ನು ನಿಭಾಹಿಸಬೇಕು ಎಂಬ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
