ವರದಿಗಾರ (ಜ.15): ಬಿಜೆಪಿಯ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರು ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಇಂದು ಜೆಡಿಎಸ್ ಸೇರ್ಪಡೆಯಾದ ಆನಂದ್ ಅಸ್ನೋಟಿಕರ್ ಅವರಿಗೆ ಜೆಡಿಎಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ದೇವೇಗೌಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ಗೆ ಮತ್ತಷ್ಟು ಶಕ್ತಿ ವೃದ್ಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗದ ನಾಯಕರಾಗಿರುವ ಆನಂದ್ ಅಸ್ನೋಟಿಕರ್ ಅವರ ಪಕ್ಷ ಸೇರ್ಪಡೆಯಿಂದ ಜೆಡಿಎಸ್, ಉತ್ತರ ಕರ್ನಾಟಕ ಜಿಲ್ಲೆಯಲ್ಲಿ 4ರಿಂದ 5 ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಶಾಸಕರಾದ ಮಧುಬಂಗಾರಪ್ಪ , ವಿಧಾನಪರಿಷತ್ ಸದಸ್ಯರಾದ ಕಾಂತರಾಜು, ರಮೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.
