ಬಿಜೆಪಿ ನಾಯಕರು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ವಿನಾಕಾರಣ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ
ವರದಿಗಾರ (ನ.10): ದೇಶದ ಮೊದಲ ಸ್ವಾತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ ಕೇವಲ ರಾಜ್ಯದ ಆಸ್ತಿಯಲ್ಲ, ದೇಶದ ಆಸ್ತಿಯಾಗಿದ್ದಾರೆ. ಹೀಗಾಗಿ ಅವರ ಜಯಂತಿಯನ್ನು ಆಚರಿಸುವ ಮೂಲಕ ಗೌರವ ಸಲ್ಲಿಸುವುದು ರಾಜ್ಯ ಸರಕಾರದ ಕರ್ತವ್ಯವೆಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅವರು ಟಿಪ್ಪು ಜಯಂತಿಯ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿಧಾನಸೌಧದ ವಜ್ರ ಮಹೋತ್ಸವದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನ್ ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದ್ದರು. ಆದರೆ, ಬಿಜೆಪಿ ನಾಯಕರು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ವಿನಾಕಾರಣ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವೀರ ಯೋಧ ಟಿಪ್ಪು ಸುಲ್ತಾನ್ ರೇಷ್ಮೆ ಉದ್ಯಮ, ತೋಟಗಾರಿಕೆ ಸೇರಿದಂತೆ ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಮೂಲಕ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿದ್ದರು ಎಂಬುವುದನ್ನು ಈ ಸಂದರ್ಭ ಡಿ.ಕೆ.ಶಿವಕುಮಾರ್ ಸ್ಮರಿಸಿಕೊಂಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿರುವ ಶ್ರೀ ರಂಗನಾಥ ದೇವಸ್ಥಾನ, ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ ಸೇರಿದಂತೆ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಇಂದಿಗೂ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ. ಇಂತಹ ಉದಾಹರಣೆಗಳು ಸಾಕಷ್ಟು ಇದ್ದರೂ ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.
ಶಾಸಕ ಆರ್.ರೋಷನ್ ಬೇಗ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಶಾಂತಿನಗರ ಶಾಸಕ ಎನ್.ಎ.ಹಾರೀಸ್, ವಿಧಾನಪರಿಷತ್ ಸದಸ್ಯ ರಿಝ್ವನ್ ಅರ್ಷದ್, ಕರ್ನಾಟಕ ಉರ್ದು ಅಕಾಡೆಮಿಯ ಅಧ್ಯಕ್ಷ ಮುಬೀನ್ ಮುನಾವರ್, ಆಮೀರ್-ಎ-ಷರಿಯತ್ನ ಹಝ್ರತ್ ಮೌಲಾನ ಸಗೀರ್, ಅಹ್ಮದ್ ಖಾನ್ ಸಾಹೇಬ್ ರಷಾದಿ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.
