ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಟಿಪ್ಪು ಜಯಂತಿಯನ್ನು ವಿರೋಧಿಸಿ ಕೋಮು ರಾಜಕಾರಣ ಮಾಡಲು ಹೊರಟಿದೆ
ವರದಿಗಾರ (ನ.10): ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಇಂದು ವಿರೋಧಿಸುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಅವರು ಟಿಪ್ಪು ಜಯಂತಿಯ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಭಾಗವಹಿಸಿ, ಗುಣಗಾನ ಮಾಡಿದ್ದರು. ಆದರೆ ಅದು ಸರಕಾರದ ಕಾರ್ಯಕ್ರಮವಾಗಿ ಜಾರಿಯಾಗುತ್ತಿದ್ದಂತೆ ವಿರೋಧಿಸಲು ಪ್ರಾರಂಭಿಸಿದ್ದಾರೆ. ಇಂತಹ ವಿರೋಧಗಳು ಬಿಜೆಪಿಗೆ ಚಟದ ರೀತಿಯಲ್ಲಿ ಅಂಟಿಕೊಂಡಿವೆ ಎಂದು ಖಾರವಾಗಿ ಹೇಳಿದ್ದಾರೆ.
ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ, ಕಳೆದ ನಾಲ್ಕು ವರ್ಷದಿಂದ ಟಿಪ್ಪು ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದಿದ್ದಾರೆ.
ವೀರ ಯೋಧ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಬಿಜೆಪಿ ನಾಯಕರು ಅಡ್ಡಿ ಪಡಿಸುತ್ತಿರುವುದು ಕೇವಲ ರಾಜಕಾರಣವೆ ಹೊರತು ಮತ್ಯಾವ ಉದ್ದೇಶವೂ ಇಲ್ಲ. ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವ ಮೂಲಕ ಬಿಜೆಪಿ ಕೋಮು ರಾಜಕಾರಣ ಮಾಡಲು ಹೊರಟಿದೆ ಎಂದು ಝಮೀರ್ ಅಹ್ಮದ್ ಆರೋಪಿಸಿದ್ದಾರೆ.
ಪತ್ರಕರ್ತೆ ನಾಝಿಯಾ ಕೌಸರ್ ಕಾರ್ಯಕ್ರಮ ನಿರೂಪಿಸಿದರು.
